ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ! ಇಬ್ಬರು ಸಜೀವ ದಹನ

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತ ಭೀತಿಯ ವಾತಾವರಣ ಸೃಷ್ಟಿಸಿದೆ. ವೇಗವಾಗಿ ಸಾಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕೆಲವೇ ಕ್ಷಣಗಳಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಕಾನ್ಪುರದಿಂದ ಗುರುಗ್ರಾಮ್ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಡಿಕ್ಕಿಯ ತೀವ್ರತೆ ಹೆಚ್ಚು ಇದ್ದ ಕಾರಣ ಬಸ್‌ನ ಮುಂಭಾಗ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕ ಸೇರಿ ಇಬ್ಬರು ಸಜೀವ ದಹನವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ನಂತರ ಪ್ರಯಾಣಿಕರಲ್ಲಿ ಭಾರೀ ಆತಂಕ ಉಂಟಾಗಿದ್ದು, ಹಲವರು ತುರ್ತಾಗಿ ಬಸ್‌ನಿಂದ ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತಂದರು. ಬಳಿಕ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಫಿರೋಜಾಬಾದ್ ಮೆಡಿಕಲ್ ಕಾಲೇಜು ಹಾಗೂ ಸೈಫೈ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.

ಘಟನೆಯಿಂದ ಎಕ್ಸ್‌ಪ್ರೆಸ್‌ವೇಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತದ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Exit mobile version