ಗ್ಯಾರಂಟಿ ಯೋಜನೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪೆಟ್ಟು : ಡಿಸಿಎಂ ಡಿ.ಕೆ ಶಿವಕುಮಾರ್​

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭಾರೀ ಪ್ರಮಾಣದ ಪೆಟ್ಟು ಬೀಳ್ತಿದೆ ಎನ್ನುವುದು ವಿರೋಧ ಪಕ್ಷದವರ ವಾದವಾಗಿತ್ತು. ಆದರೆ ಈ ವಾದವನ್ನು ಒಪ್ಪಿಕೊಳ್ಳಲು ಸಿದ್ಧವೇ ಇರದ ರಾಜ್ಯ ಕಾಂಗ್ರೆಸ್​ ಸರ್ಕಾರ ಈವರೆಗೂ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಲೇ ಬಂದಿದೆ. ಇದೇ ಮೊದಲ ಬಾರಿಗೆ ಡಿಸಿಎಂ ಡಿ.ಕೆ ಶಿವಕುಮಾರ್​ ಸತ್ಯ ಬಾಯ್ಬಿಟ್ಟಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂಬ ವಿಚಾರವನ್ನು ಬಾಯ್ಬಿಟ್ಟಿದ್ದಾರೆ.

ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಆಯೋಜಿಸಲಾಗಿದ್ದ ಕುಸುಮ ಸಂಜೀವಿನಿ , ಹಿಮೋಫಿಲಿಯ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆ್ಯಂಬುಲೆನ್ಸ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್​ ಈ ರೀತಿಯ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಕುಟುಂಬಕ್ಕೆ ₹5 ಸಾವಿರದಷ್ಟು ಹಣಕಾಸಿನ ನೆರವು ನೀಡುತ್ತಿದೆ. ಗೃಹಲಕ್ಷ್ಮೀ, ಉಚಿತ ಬಸ್ಸು, 200 ಯುನಿಟ್‌ವರೆಗೆ ಉಚಿತ ವಿದ್ಯುತ್‌, ಯುವನಿಧಿ ಯೋಜನೆ ಜಾರಿಗೊಳಿಸಿದೆ. ಸರ್ಕಾರಕ್ಕೆ ಇದರಿಂದ ಹೊರೆ ಆಗುತ್ತಿರಬಹುದು. ಹೊರೆಯಾದರೂ ಸರ್ಕಾರ ಜನತೆಗೆ ಆರ್ಥಿಕ ಶಕ್ತಿ ಕಡಿಮೆ ಆಗಬಾರದು, ಮಾನಸಿಕ ಒತ್ತಡ ಉಂಟಾಗಬಾರದು. ಜನರಿಗೆ ಮಾನಸಿಕ ಧೈರ್ಯ ತುಂಬಲು ಈ ಯೋಜನೆ ಮುಂದುವರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಕಳ : ಅಂಬೇಡ್ಕರ್​ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ : ಹಲವು ಬೇಡಿಕೆಗಳ ಈಡೇರಿಕೆಯ ಅಭಯ

ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆ ಎಂದಿಗೂ ಇರಲಿದೆ. ಇದರಿಂದ ರಾಜ್ಯದ ಅಭಿವೃದ್ಧಿಗೆ ಯಾವುದೇ ತೊಡಕು ಉಂಟಾಗುವುದಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಡಿ.ಕೆ ಶಿವಕುಮಾರ್​ ಹೇಳಿದರು.

Exit mobile version